Thursday, August 13th, 2026 9:07 AM
[ditty id=171]

ಸ್ವಾತಂತ್ರ್ಯ ಹಬ್ಬಕ್ಕೆ ಹೈಅಲರ್ಟ್: ಭದ್ರತೆ, ಸಂಚಾರಕ್ಕೆ ಪ್ರಿಯಾಂಕ್ ಖರ್ಗೆ ಖಡಕ್ ಸೂಚನೆ

ಬೆಂಗಳೂರು ಆ.13: ಆಗಸ್ಟ್ 15ರಂದು ಬೆಂಗಳೂರಿನ ಐತಿಹಾಸಿಕ ವಿಧಾನಸೌಧದ ಆವರಣದಲ್ಲಿ ನಡೆಯಲಿರುವ ರಾಜ್ಯದ ಮೊದಲ ಸಾರ್ವಜನಿಕ ‘ಸ್ವಾತಂತ್ರ್ಯ ಹಬ್ಬ–2026’ ಕಾರ್ಯಕ್ರಮಕ್ಕೆ ಭರದ ಸಿದ್ಧತೆ ನಡೆಯುತ್ತಿದೆ.ಕಾರ್ಯಕ್ರಮಕ್ಕೆ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವ ನಿರೀಕ್ಷೆ ಹಿನ್ನೆಲೆಯಲ್ಲಿ ಭದ್ರತೆ ಹಾಗೂ ಸಂಚಾರ ನಿರ್ವಹಣೆ ಕುರಿತು ಸಚಿವ ಪ್ರಿಯಾಂಕ್ ಖರ್ಗೆ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.

ಪೊಲೀಸ್ ಇಲಾಖೆ ಹಾಗೂ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಸಚಿವರು, ಕಾರ್ಯಕ್ರಮದ ವೇಳೆ ಯಾವುದೇ ರೀತಿಯ ಅಹಿತಕರ ಘಟನೆಗಳಿಗೆ ಅವಕಾಶವಾಗದಂತೆ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಿದರು.ಸಾರ್ವಜನಿಕರ ಸುಗಮ ಪ್ರವೇಶ ಮತ್ತು ನಿರ್ಗಮನ, ವಾಹನಗಳ ನಿಲುಗಡೆ, ಸಂಚಾರ ವ್ಯವಸ್ಥೆ ಹಾಗೂ ಜನದಟ್ಟಣೆ ನಿಯಂತ್ರಣಕ್ಕೆ ಸೂಕ್ತ ವ್ಯವಸ್ಥೆ ಮಾಡಬೇಕು ಎಂದು ನಿರ್ದೇಶನ ನೀಡಿದರು.ಬೆಳಿಗ್ಗೆ 11 ಗಂಟೆಯಿಂದ ರಾತ್ರಿ 10 ಗಂಟೆವರೆಗೆ ನಡೆಯಲಿರುವ ಸ್ವಾತಂತ್ರ್ಯ ಹಬ್ಬದಲ್ಲಿ ಹಲವು ವಿಶೇಷ ಕಾರ್ಯಕ್ರಮಗಳು ನಡೆಯಲಿವೆ.

‘ದಿ ಪೀಪಲ್ಸ್ ಇಂಡಿಯಾ ಪೆರೇಡ್’, ವಿಧಾನಸೌಧದ ವಿಶೇಷ ಪ್ರವಾಸ, ಮಕ್ಕಳಿಗಾಗಿ ‘ಮಕ್ಕಳ ಮೇಳ’, ರಸಪ್ರಶ್ನೆ, ಸಾಂಸ್ಕೃತಿಕ ಕಾರ್ಯಕ್ರಮಗಳು, ಸಂಗೀತ ಕಚೇರಿ ಸೇರಿದಂತೆ ಹಲವು ಕಾರ್ಯಕ್ರಮಗಳು ಜನರನ್ನು ರಂಜಿಸಲಿವೆ. ಇದರ ಜೊತೆಗೆ ವಿವಿಧ ಜಿಲ್ಲೆಗಳ ಸಾಂಪ್ರದಾಯಿಕ ಆಹಾರ ಹಾಗೂ ಕರಕುಶಲ ವಸ್ತುಗಳ ಪ್ರದರ್ಶನವೂ ನಡೆಯಲಿದೆ.ವಿಶೇಷವಾಗಿ ಸಂಜೆ ನಡೆಯಲಿರುವ ಸಂಗೀತ ಕಾರ್ಯಕ್ರಮ ಹಾಗೂ ರಾತ್ರಿ ನಡೆಯಲಿರುವ ಪಟಾಕಿ ಪ್ರದರ್ಶನಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಜನರು ಆಗಮಿಸುವ ಸಾಧ್ಯತೆ ಇದೆ.

ಹೀಗಾಗಿ ಈ ಅವಧಿಯಲ್ಲಿ ಭದ್ರತೆ ಹಾಗೂ ಜನದಟ್ಟಣೆ ನಿಯಂತ್ರಣಕ್ಕೆ ವಿಶೇಷ ಗಮನ ನೀಡಬೇಕು ಎಂದು ಸಚಿವ ಪ್ರಿಯಾಂಕ್ ಖರ್ಗೆ ಅಧಿಕಾರಿಗಳಿಗೆ ಸೂಚಿಸಿದರು.ಕಾರ್ಯಕ್ರಮಕ್ಕೆ ಆಗಮಿಸುವ ಸಾರ್ವಜನಿಕರಿಗೆ ಯಾವುದೇ ರೀತಿಯ ಅನಾನುಕೂಲವಾಗದಂತೆ ಸುಗಮ ಸಂಚಾರ ವ್ಯವಸ್ಥೆ ಕಲ್ಪಿಸಬೇಕು.ಪಾದಚಾರಿಗಳ ಸುರಕ್ಷತೆ, ತುರ್ತು ಸೇವೆಗಳಿಗೆ ಅಗತ್ಯ ವ್ಯವಸ್ಥೆ ಹಾಗೂ ಜನದಟ್ಟಣೆ ನಿಯಂತ್ರಣಕ್ಕೆ ಸಮರ್ಪಕ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಸಚಿವರು ನಿರ್ದೇಶನ ನೀಡಿದರು.

ಕಾರ್ಯಕ್ರಮದ ವೇಳೆ ಸಾರ್ವಜನಿಕರ ಸುರಕ್ಷತೆಯಲ್ಲಿ ಯಾವುದೇ ಲೋಪವಾಗದಂತೆ ಪೊಲೀಸ್ ಇಲಾಖೆ, ಜಿಬಿಎ ಸೇರಿದಂತೆ ಸಂಬಂಧಿತ ಎಲ್ಲಾ ಇಲಾಖೆಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದು ಸೂಚಿಸಿದರು. ಸಭೆಯಲ್ಲಿ ಜಿಬಿಎ ಮುಖ್ಯ ಆಯುಕ್ತ ಎಂ. ಮಹೇಶ್ವರ ರಾವ್, ಬೆಂಗಳೂರು ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಸೇರಿದಂತೆ ಪೊಲೀಸ್ ಇಲಾಖೆ, ಜಿಬಿಎ ಹಾಗೂ ಸಂಬಂಧಿತ ಇಲಾಖೆಗಳ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.ಸ್ವಾತಂತ್ರ್ಯ ಹಬ್ಬದ ಸಂಭ್ರಮಕ್ಕೆ ಬೆಂಗಳೂರು ಸಜ್ಜಾಗುತ್ತಿದ್ದು, ಸಾರ್ವಜನಿಕರ ಸುರಕ್ಷತೆ ಹಾಗೂ ಸುಗಮ ಸಂಚಾರಕ್ಕೆ ಆದ್ಯತೆ ನೀಡಲಾಗಿದೆ.

Related Articles

TRENDING ARTICLES

error: Content is protected !!