ಬೆಂಗಳೂರು ಆ.13: ಕರ್ನಾಟಕ ಲೋಕಾಯುಕ್ತ ಸಂಸ್ಥೆಯಿಂದ ಆಗಸ್ಟ್ 11ರಂದು ಬೆಂಗಳೂರಿನ ವಿವಿಧ ಖಜಾನೆ ಕಚೇರಿಗಳಲ್ಲಿ ದಿಢೀರ್ ತಪಾಸಣೆ ನಡೆಸಲಾಯಿತು.

ಕರ್ನಾಟಕ ಲೋಕಾಯುಕ್ತ ಬಿ.ಎಸ್. ಪಾಟೀಲ್ ಅವರ ಸಲಹೆ ಮೇರೆಗೆ ಉಪಲೋಕಾಯುಕ್ತ ನ್ಯಾಯಮೂರ್ತಿ ಬಿ. ವೀರಪ್ಪ ಅವರು ಲೋಕಾಯುಕ್ತ ಸಂಸ್ಥೆಯ ನ್ಯಾಯಾಧೀಶರು, ಲೋಕಾಯುಕ್ತ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗಳ ತಂಡದೊಂದಿಗೆ ವಿವಿಧ ಕಚೇರಿಗಳಿಗೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ವೇಳೆ ಬೆಂಗಳೂರು ಉತ್ತರ ತಾಲ್ಲೂಕಿನ ಮಲ್ಲೇಶ್ವರಂನಲ್ಲಿರುವ ಉಪ ಖಜಾನೆ ಕಚೇರಿಗೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಲಾಯಿತು.

ಬಳಿಕ ಯಲಹಂಕದಲ್ಲಿರುವ ಉಪ ಖಜಾನಾಧಿಕಾರಿಗಳ ಕಚೇರಿಗೂ ಭೇಟಿ ನೀಡಿ ಅಲ್ಲಿನ ಕಾರ್ಯನಿರ್ವಹಣೆ ಹಾಗೂ ದಾಖಲೆಗಳನ್ನು ಪರಿಶೀಲಿಸಲಾಯಿತು.ಇದರ ಜೊತೆಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ಟೌನ್‌ನಲ್ಲಿರುವ ಜಿಲ್ಲಾ ಖಜಾನೆ ಅಧಿಕಾರಿಗಳ ಕಚೇರಿಗೂ ಭೇಟಿ ನೀಡಿ ಪರಿಶೀಲನೆ ನಡೆಸಲಾಯಿತು.

ಲೋಕಾಯುಕ್ತ ಅಧಿಕಾರಿಗಳ ತಂಡವು ಕಚೇರಿಗಳಲ್ಲಿನ ದಾಖಲೆಗಳ ನಿರ್ವಹಣೆ, ಅಧಿಕಾರಿಗಳು ಮತ್ತು ಸಿಬ್ಬಂದಿಯ ಕಾರ್ಯವೈಖರಿ ಹಾಗೂ ಸಾರ್ವಜನಿಕರಿಗೆ ನೀಡಲಾಗುತ್ತಿರುವ ಸೇವೆಗಳ ಕುರಿತು ಪರಿಶೀಲನೆ ನಡೆಸಿತು.ಅರವಿಂದ್ ಎನ್.ವಿ., ಉಪನಿಬಂಧಕರು, ವಿಚಾರಣೆಗಳು, ಕರ್ನಾಟಕ ಲೋಕಾಯುಕ್ತ, ಬೆಂಗಳೂರು ಸೇರಿದಂತೆ ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಸಿಬ್ಬಂದಿ ಈ ದಿಢೀರ್ ತಪಾಸಣೆಯಲ್ಲಿ ಭಾಗವಹಿಸಿದ್ದರು.ಆಗಸ್ಟ್ 11ರಂದು ನಡೆದ ಈ ದಿಢೀರ್ ತಪಾಸಣೆಯ ಮೂಲಕ ಖಜಾನೆ ಕಚೇರಿಗಳ ಕಾರ್ಯನಿರ್ವಹಣೆ ಹಾಗೂ ಆಡಳಿತಾತ್ಮಕ ಪ್ರಕ್ರಿಯೆಗಳ ಬಗ್ಗೆ ಲೋಕಾಯುಕ್ತ ಅಧಿಕಾರಿಗಳು ಪರಿಶೀಲನೆ ನಡೆಸಿದರು.


