ವಿಜಯನಗರ ಜಿಲ್ಲಾ ಪೊಲೀಸ್ ಕಚೇರಿಯಲ್ಲಿ ಕಾನೂನು ಸುವ್ಯವಸ್ಥೆ ಹಾಗೂ ಅಪರಾಧ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಮಹತ್ವದ ವಿಮರ್ಶನಾ ಸಭೆ ನಡೆಯಿತು.

ಐ.ಜಿ.ಪಿ. ವಿಕಾಸ್ ಕುಮಾರ್ ವಿಕಾಸ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಜಿಲ್ಲೆಯ ಕಾನೂನು ಸುವ್ಯವಸ್ಥೆಯ ಪರಿಸ್ಥಿತಿ, ಅಪರಾಧ ನಿಯಂತ್ರಣ ಹಾಗೂ ರಸ್ತೆ ಅಪಘಾತಗಳ ತಡೆಗೆ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಅಧಿಕಾರಿಗಳೊಂದಿಗೆ ಚರ್ಚೆ ನಡೆಸಲಾಯಿತು.
ಜಿಲ್ಲೆಯಲ್ಲಿ ಅಪರಾಧ ಚಟುವಟಿಕೆಗಳಿಗೆ ಕಡಿವಾಣ ಹಾಕಲು ಪರಿಣಾಮಕಾರಿ ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಲಾಯಿತು. ಅಪರಾಧ ಪ್ರಕರಣಗಳ ಮೇಲೆ ನಿರಂತರ ನಿಗಾ ವಹಿಸಿ, ಸಾರ್ವಜನಿಕರ ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡುವಂತೆ ನಿರ್ದೇಶನ ನೀಡಲಾಯಿತು.

ರಸ್ತೆ ಅಪಘಾತಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಅಪಘಾತ ಸಂಭವಿಸುವ ಸ್ಥಳಗಳನ್ನು ಗುರುತಿಸಿ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಲಾಯಿತು. ಸಂಚಾರ ನಿಯಮಗಳ ಪಾಲನೆಗೆ ಹೆಚ್ಚಿನ ಒತ್ತು ನೀಡುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಯಿತು.
ಇದೇ ವೇಳೆ, ಪೊಲೀಸ್ ಇಲಾಖೆ ಮತ್ತು ಸಾರ್ವಜನಿಕರ ನಡುವಿನ ಸಂಪರ್ಕವನ್ನು ಮತ್ತಷ್ಟು ಬಲಪಡಿಸುವಂತೆ ಸೂಚನೆ ನೀಡಲಾಯಿತು. ಸಮುದಾಯ ಪೊಲೀಸಿಂಗ್ ಅನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸುವ ಮೂಲಕ ಸಾರ್ವಜನಿಕರೊಂದಿಗೆ ಉತ್ತಮ ಬಾಂಧವ್ಯ ಬೆಳೆಸಿಕೊಳ್ಳುವಂತೆ ಅಧಿಕಾರಿಗಳಿಗೆ ತಿಳಿಸಲಾಯಿತು.

ಕಾನೂನು ಸುವ್ಯವಸ್ಥೆ ಕಾಪಾಡುವುದು, ಅಪರಾಧಗಳನ್ನು ನಿಯಂತ್ರಿಸುವುದು ಹಾಗೂ ಸಾರ್ವಜನಿಕರ ಸುರಕ್ಷತೆ ಖಚಿತಪಡಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಸಮನ್ವಯದಿಂದ ಕಾರ್ಯನಿರ್ವಹಿಸುವಂತೆ ಐಜಿಪಿ ಸೂಚಿಸಿದರು.
ಸಭೆಯಲ್ಲಿ ವಿಜಯನಗರ ಜಿಲ್ಲಾ ಪೊಲೀಸ್ ಅಧೀಕ್ಷಕರು ಸೇರಿದಂತೆ ಜಿಲ್ಲೆಯ ಎಲ್ಲಾ ಡಿ.ಎಸ್.ಪಿ., ಪಿ.ಐ./ಸಿ.ಪಿ.ಐ. ಹಾಗೂ ಪಿ.ಎಸ್.ಐ.ಗಳು ಉಪಸ್ಥಿತರಿದ್ದರು.


