ಕರ್ತವ್ಯದಲ್ಲಿದ್ದ ಸಂಚಾರ ಪೊಲೀಸರ ಮೇಲೆ ಹಲ್ಲೆ: ಆರೋಪಿ ಬಂಧನ

ಹುಳಿಮಾವು ಪೊಲೀಸ್ ಠಾಣೆ ವ್ಯಾಪ್ತಿಯ ಗೊಟ್ಟಿಗೆರೆ ಜಂಕ್ಷನ್ ಬಿ.ಜಿ.ರೋಡ್‌ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಸಂಚಾರ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಆರೋಪಿಯನ್ನು ಬಂಧಿಸಲಾಗಿದೆ.

ಆಗಸ್ಟ್ 16ರಂದು ಮಧ್ಯಾಹ್ನ 3 ಗಂಟೆ ಸುಮಾರಿಗೆ ವಾಹನಗಳ ಸುಗಮ ಸಂಚಾರಕ್ಕಾಗಿ ಸಿಗ್ನಲ್‌ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಹುಳಿಮಾವು ಸಂಚಾರ ಪೊಲೀಸ್ ಠಾಣೆಯ ಪಿಸಿ 18249 ಅರುಣ್ ಮಂಜಪ್ಪ ಬಡಗೌಡ್ರ ಅವರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿ, ತಲೆಯಿಂದ ಮುಖಕ್ಕೆ ಡಿಕ್ಕಿ ಹೊಡೆದು, ಕೈಯಿಂದ ಗುದ್ದಿ ಗಾಯಗೊಳಿಸಲಾಗಿತ್ತು. ಅಲ್ಲದೇ ಕಾಲಿನಿಂದ ಒದ್ದು ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಲ್ಲದೆ, ಅವರ ಕೈಯಲ್ಲಿದ್ದ ಮೊಬೈಲ್ ಕಿತ್ತು ನೆಲಕ್ಕೆ ಹೊಡೆದು ಹಾನಿಗೊಳಿಸಲಾಗಿತ್ತು.

ಈ ಸಂಬಂಧ ಹುಳಿಮಾವು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣದ ತನಿಖೆ ಕೈಗೊಂಡ ಪೊಲೀಸರು, ಡಿಸಿಪಿ ನಿರ್ದೇಶನದಂತೆ ಹುಳಿಮಾವು ಪೊಲೀಸ್ ಠಾಣೆ ಇನ್ಸ್‌ಪೆಕ್ಟರ್ ಜಗದೀಶ್ ಆರ್. ನೇತೃತ್ವದಲ್ಲಿ ತಂಡ ರಚಿಸಿ ಆರೋಪಿಯ ಪತ್ತೆಗೆ ಕಾರ್ಯಾಚರಣೆ ನಡೆಸಿದ್ದಾರೆ.

ಕಾರ್ಯಾಚರಣೆಯಲ್ಲಿ ಎ1 ಆರೋಪಿ ಮಂಜುನಾಥ್ ಸಿ. ಅಲಿಯಾಸ್ ಗೊಟ್ಟಿಗೆರೆ ಮಂಜಣ್ಣ ಎಂಬಾತನನ್ನು ಆಗಸ್ಟ್ 17ರಂದು ಹುಳಿಮಾವು ಮೀನಾಕ್ಷಿ ಮಾಲ್ ಬಳಿ ಪತ್ತೆ ಮಾಡಿ ಬಂಧಿಸಲಾಗಿದೆ. ಆರೋಪಿಯನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲು ಕ್ರಮ ಕೈಗೊಳ್ಳಲಾಗಿದೆ.

ಉಳಿದ ಆರೋಪಿಗಳ ಪತ್ತೆಗಾಗಿ ಬೇಗೂರು ಮತ್ತು ಬಂಡೆಪಾಳ್ಯ ಪೊಲೀಸ್ ಠಾಣೆಗಳ ಅಧಿಕಾರಿಗಳನ್ನೊಳಗೊಂಡ ಮತ್ತೊಂದು ತಂಡ ರಚಿಸಲಾಗಿದ್ದು, ಸಿಸಿ ಕ್ಯಾಮೆರಾ ದೃಶ್ಯಗಳನ್ನು ಪರಿಶೀಲಿಸಿ ಆರೋಪಿಗಳ ಪತ್ತೆಗೆ ಕಾರ್ಯಾಚರಣೆ ಮುಂದುವರಿದಿದೆ.

Related Articles

TRENDING ARTICLES