ಗಣೇಶ ಹಬ್ಬದ ಬಂದೋಬಸ್ತ್‌ಗೆ ಈಶಾನ್ಯ ವಿಭಾಗ ಸಜ್ಜು

ಮುಂದಿನ ಗಣೇಶ ಹಬ್ಬದ ಹಿನ್ನೆಲೆಯಲ್ಲಿ ಈಶಾನ್ಯ ವಿಭಾಗದಲ್ಲಿ ಪೊಲೀಸ್ ಬಂದೋಬಸ್ತ್ ಹಾಗೂ ಭದ್ರತಾ ಕ್ರಮಗಳಿಗೆ ಸಿದ್ಧತೆ ಆರಂಭವಾಗಿದೆ.ಮಾನ್ಯ ಪೊಲೀಸ್ ಆಯುಕ್ತರ ಆದೇಶದ ಮೇರೆಗೆ, ಈಶಾನ್ಯ ವಿಭಾಗದ ಎಲ್ಲಾ ಎಸಿಪಿ ಹಾಗೂ ಇನ್ಸ್‌ಪೆಕ್ಟರ್‌ಗಳೊಂದಿಗೆ ಪೂರ್ವಭಾವಿ ಸಭೆ ನಡೆಸಿ, ಹಬ್ಬದ ಸಂದರ್ಭದಲ್ಲಿ ಕೈಗೊಳ್ಳಬೇಕಾದ ಭದ್ರತಾ ಕ್ರಮಗಳ ಕುರಿತು ವಿಸ್ತೃತವಾಗಿ ಚರ್ಚಿಸಲಾಯಿತು.

ಗಣೇಶ ಮೂರ್ತಿ ಪ್ರತಿಷ್ಠಾಪನೆ, ಆಯೋಜಕರು ಹಾಗೂ ನಡೆಯಲಿರುವ ವಿವಿಧ ಕಾರ್ಯಕ್ರಮಗಳ ಕುರಿತು ಮುಂಚಿತವಾಗಿಯೇ ಸಂಪೂರ್ಣ ಮಾಹಿತಿ ಸಂಗ್ರಹಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಯಿತು. ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ಅಗತ್ಯವಿರುವ ಅನುಮತಿಗಳನ್ನು ಕಡ್ಡಾಯವಾಗಿ ಖಚಿತಪಡಿಸಿಕೊಳ್ಳುವಂತೆ ತಿಳಿಸಲಾಯಿತು.

ಇನ್ನು ಬೀಟ್ ಮಟ್ಟದಲ್ಲಿ ಪರಿಣಾಮಕಾರಿ ನಿಗಾ ವಹಿಸುವುದು, ಮೆರವಣಿಗೆ ಸಾಗುವ ಮಾರ್ಗ ಹಾಗೂ ಗಣೇಶ ಮೂರ್ತಿ ವಿಸರ್ಜನಾ ಸ್ಥಳಗಳನ್ನು ಪೂರ್ವಭಾವಿಯಾಗಿ ಪರಿಶೀಲಿಸುವಂತೆ ಸೂಚನೆ ನೀಡಲಾಯಿತು.

ಸೂಕ್ಷ್ಮ ಪ್ರದೇಶಗಳನ್ನು ಗುರುತಿಸಿ, ಅಗತ್ಯ ಪೊಲೀಸ್ ಬಂದೋಬಸ್ತ್ ನಿಯೋಜನೆ, ಬ್ಯಾರಿಕೇಡಿಂಗ್, ಸಿಸಿಟಿವಿ ಹಾಗೂ ಬೆಳಕಿನ ವ್ಯವಸ್ಥೆ ಸೇರಿದಂತೆ ಎಲ್ಲ ಅಗತ್ಯ ಭದ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಲಾಯಿತು.

ಹಬ್ಬದ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆಗಳಿಗೆ ಅವಕಾಶವಾಗದಂತೆ ಪೆಟ್ರೋಲಿಂಗ್ ಹೆಚ್ಚಿಸುವುದು, ಸೂಕ್ಷ್ಮ ಸ್ಥಳಗಳಲ್ಲಿ ನಿರಂತರ ನಿಗಾ ವಹಿಸುವುದು ಹಾಗೂ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಯಿತು.ಜೊತೆಗೆ ಸೌಂಡ್ ಸಿಸ್ಟಮ್ ಬಳಕೆ ಹಾಗೂ ಪ್ರಚಾರ ಸಾಮಗ್ರಿಗಳಿಗೆ ಸಂಬಂಧಿಸಿದ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ತಿಳಿಸಲಾಯಿತು.

ಗಣೇಶ ಹಬ್ಬವನ್ನು ಶಾಂತಿಯುತ, ಸುವ್ಯವಸ್ಥಿತ ಹಾಗೂ ಸುರಕ್ಷಿತವಾಗಿ ಆಚರಿಸಲು ಅಗತ್ಯವಿರುವ ಎಲ್ಲಾ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡು, ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಅಧಿಕಾರಿಗಳು ಹಾಗೂ ಸಿಬ್ಬಂದಿ ಸಮನ್ವಯದಿಂದ ಕಾರ್ಯನಿರ್ವಹಿಸುವಂತೆ ಸೂಚಿಸಲಾಯಿತು.

Related Articles

TRENDING ARTICLES