ರಾಜ್ಯ ಪೊಲೀಸ್ ಇಲಾಖೆಯಲ್ಲಿ ಬರೋಬ್ಬರಿ 30 ವರ್ಷಗಳ ಸುದೀರ್ಘ ಸೇವೆ ಸಲ್ಲಿಸಿದ್ದ ಪೂರ್ವ ವಲಯದ ಐಜಿಪಿ ಡಾ. ಬಿ.ಆರ್. ರವಿಕಾಂತೇಗೌಡ ಪೊಲೀಸ್ ಸೇವೆಯಿಂದ ನಿವೃತ್ತರಾಗಿದ್ದಾರೆ.

1997ರಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಡಿವೈಎಸ್‌ಪಿಯಾಗಿ ವೃತ್ತಿಜೀವನ ಆರಂಭಿಸಿದ್ದ ರವಿಕಾಂತೇಗೌಡ, ಬಳಿಕ ರಾಜ್ಯದ ವಿವಿಧ ಜಿಲ್ಲೆಗಳು ಹಾಗೂ ಪ್ರಮುಖ ನಗರಗಳಲ್ಲಿ ಹಲವು ಮಹತ್ವದ ಜವಾಬ್ದಾರಿಗಳನ್ನು ನಿರ್ವಹಿಸಿದ್ದಾರೆ.
ನಂಜನಗೂಡು, ಹುಬ್ಬಳ್ಳಿ-ಧಾರವಾಡ, ಮೈಸೂರು ನಗರ ಸೇರಿದಂತೆ ವಿವಿಧೆಡೆ ಸೇವೆ ಸಲ್ಲಿಸಿದ್ದ ಅವರು, ದಕ್ಷಿಣ ಕನ್ನಡ ಮತ್ತು ಬೆಳಗಾವಿ ಜಿಲ್ಲೆಗಳ ಎಸ್‌ಪಿಯಾಗಿಯೂ ಕರ್ತವ್ಯ ನಿರ್ವಹಿಸಿದ್ದರು.
ಬೆಂಗಳೂರು ನಗರದಲ್ಲಿ ಡಿಸಿಪಿಯಾಗಿ ವಿವಿಧ ವಿಭಾಗಗಳಲ್ಲಿ ಸೇವೆ ಸಲ್ಲಿಸಿದ ಬಳಿಕ ಡಿಐಜಿಯಾಗಿ ಬಡ್ತಿ ಪಡೆದು, ಅಪರಾಧ ಮತ್ತು ಸಂಚಾರ ವಿಭಾಗದ ಜಂಟಿ ಪೊಲೀಸ್ ಆಯುಕ್ತರಾಗಿಯೂ ಕಾರ್ಯನಿರ್ವಹಿಸಿದ್ದರು.
ಬಳಿಕ ಐಜಿಪಿಯಾಗಿ ಪೊಲೀಸ್ ಪ್ರಧಾನ ಕಚೇರಿ, ಕೇಂದ್ರ ವಲಯ ಸೇರಿದಂತೆ ಹಲವು ಪ್ರಮುಖ ಜವಾಬ್ದಾರಿಗಳನ್ನು ನಿರ್ವಹಿಸಿದ ಅವರು, ಕೊನೆಯದಾಗಿ ಪೂರ್ವ ವಲಯದ ಐಜಿಪಿಯಾಗಿ ಸೇವೆ ಸಲ್ಲಿಸುತ್ತಿದ್ದರು.
ಅತ್ಯುತ್ತಮ ಸೇವೆಗಾಗಿ ಮುಖ್ಯಮಂತ್ರಿ ಪದಕ ಹಾಗೂ ರಾಷ್ಟ್ರಪತಿ ಪದಕಕ್ಕೆ ಭಾಜನರಾಗಿರುವ ಡಾ. ಬಿ.ಆರ್. ರವಿಕಾಂತೇಗೌಡ ಅವರಿಗೆ ದಾವಣಗೆರೆ ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ಭಾವಪೂರ್ಣ ಬೀಳ್ಕೊಡುಗೆ ನೀಡಲಾಯಿತು.
ಕರ್ತವ್ಯನಿಷ್ಠೆ, ಪ್ರಾಮಾಣಿಕತೆ ಮತ್ತು ಶಿಸ್ತಿನ ಮೂಲಕ ಪೊಲೀಸ್ ಇಲಾಖೆಯಲ್ಲಿ ತಮ್ಮದೇ ಛಾಪು ಮೂಡಿಸಿದ್ದ ಹಿರಿಯ ಅಧಿಕಾರಿಯ ಮೂರು ದಶಕಗಳ ಸೇವೆಗೆ ಇದೀಗ ಅಧಿಕೃತವಾಗಿ ತೆರೆ ಬಿದ್ದಿದೆ.


