ಬೆಂಗಳೂರಿನ ಗಿರಿನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಗೆ ನ್ಯಾಯಾಲಯ 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಹಾಗೂ 1 ಲಕ್ಷ ರೂಪಾಯಿ ದಂಡ ವಿಧಿಸಿದೆ.
2021ರ ಜುಲೈ 19ರಂದು ಬನಶಂಕರಿ 3ನೇ ಹಂತದ ಇಂದಿರಾ ಕ್ಯಾಂಟೀನ್ ಹಿಂಭಾಗದಲ್ಲಿ ಗಾಂಜಾ ಮಾರಾಟ ಮಾಡುತ್ತಿರುವ ಬಗ್ಗೆ ಪೊಲೀಸರಿಗೆ ಖಚಿತ ಮಾಹಿತಿ ಲಭ್ಯವಾಗಿತ್ತು.ಮಾಹಿತಿ ಆಧರಿಸಿ ಕಾರ್ಯಾಚರಣೆ ನಡೆಸಿದ ಗಿರಿನಗರ ಪೊಲೀಸರು, ಗಾಂಜಾ ಮಾರಾಟ ಮಾಡುತ್ತಿದ್ದ ಭಗೀರತ್ ದೆವಾಸಿ ಎಂಬಾತನನ್ನು ವಶಕ್ಕೆ ಪಡೆದಿದ್ದರು.

ಆರೋಪಿಯಿಂದ 2 ಕೆ.ಜಿ. 40 ಗ್ರಾಂ ಗಾಂಜಾ ಹಾಗೂ ಕೃತ್ಯಕ್ಕೆ ಬಳಸಿದ್ದ ದ್ವಿಚಕ್ರ ವಾಹನವನ್ನು ಪೊಲೀಸರು ಜಪ್ತಿ ಮಾಡಿದ್ದರು.ಈ ಸಂಬಂಧ ಗಿರಿನಗರ ಪೊಲೀಸ್ ಠಾಣೆಯಲ್ಲಿ ಎನ್‌ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಿಸಿ, ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು.
ಪ್ರಕರಣದ ತನಿಖೆಯನ್ನು ಪೊಲೀಸ್ ಇನ್ಸ್‌ಪೆಕ್ಟರ್ ದೀಪಕ್ ಎಲ್. ನಡೆಸಿ, ಆರೋಪಿಯ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.ವಿಚಾರಣೆ ನಡೆಸಿದ ನ್ಯಾಯಾಧೀಶ ಆನಂದ್ ಅವರು, 2026ರ ಆಗಸ್ಟ್ 29ರಂದು ಆರೋಪಿಗೆ 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಹಾಗೂ 1 ಲಕ್ಷ ರೂಪಾಯಿ ದಂಡ ವಿಧಿಸಿ ಆದೇಶಿಸಿದ್ದಾರೆ.ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕರಾದ ಶ್ರೀವಾಣಿ ಅವರು ವಾದ ಮಂಡಿಸಿದ್ದರು.


